132
ದಾವೀದನ ಮನೆತನವನ್ನು ಪುನಃಸ್ಥಾಪಿಸಬೇಕೆಂಬ ಪ್ರಾರ್ಥನೆ
ಯಾತ್ರಾಗೀತೆ.
ಕೀರ್ತ 89; 2ಸಮು 7
ಯೆಹೋವನೇ, ದಾವೀದನ ಹಿತಕ್ಕೋಸ್ಕರ,
ಅವನ ಶ್ರಮೆಗಳನ್ನು ನೆನಪುಮಾಡಿಕೋ.
ಯಾಕೋಬನ ಶೂರನಾದ ಯೆಹೋವನಿಗಾಗಿ
ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,
“ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ,
ಮಂಚವನ್ನು ಹತ್ತುವುದಿಲ್ಲ,
ಕಣ್ಣುಗಳನ್ನು ಮುಚ್ಚುವುದಿಲ್ಲ,
ರೆಪ್ಪೆಗಳನ್ನು ಕೂಡಿಸುವುದಿಲ್ಲ” ಎಂದು
ಅವನು ಯೆಹೋವನಿಗೆ ಪ್ರಮಾಣಮಾಡಿ,
ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.
ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು;
ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು.
“ಬನ್ನಿರಿ, ಆತನ ಮಂದಿರಕ್ಕೆ ಹೋಗಿ
ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!”
ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ,
ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು.
ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ;
ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.
10 ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ;
ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ.
11 ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ;
ಆತನು ಅದನ್ನು ಬದಲಿಸುವುದಿಲ್ಲ.
“ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;
12 ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ,
ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ,
ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”
13 ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ,
ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.
14 ಆತನು, “ಇದು ನನ್ನ ಶಾಶ್ವತ ವಾಸಸ್ಥಾನ;
ಇಲ್ಲೇ ಇರುವೆನು; ಇದು ನನಗೆ ಇಷ್ಟ.
15 ಇದರ ಆದಾಯವನ್ನು ಆಶೀರ್ವದಿಸುವೆನು;
ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು;
16 ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು;
ಭಕ್ತರು ಉತ್ಸಾಹಧ್ವನಿ ಮಾಡುವರು.
17 ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು;
ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.
18 ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು;
ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”