3
ನಂಬಿಕೆಯ ಮೂಲಕ ದೇವರಾಶೀರ್ವಾದ
1 ಯೇಸು ಕ್ರಿಸ್ತನು ಶಿಲುಬೆಯ ಮೇಲೆ ಮರಣ ಹೊಂದಿದ್ದರ ಬಗ್ಗೆ ಗಲಾತ್ಯದಲ್ಲಿರುವ ನಿಮಗೆ ಬಹು ಸ್ಪಷ್ಟವಾಗಿ ತಿಳಿಸಲಾಯಿತು. ಆದರೆ ನೀವು ಬಹು ಬುದ್ಧಿಹೀನರಾಗಿದ್ದೀರಿ. ನಿಮ್ಮನ್ನು ಮೋಸಗೊಳಿಸಲು ಬೇರೊಬ್ಬನಿಗೆ ಅವಕಾಶ ಮಾಡಿಕೊಟ್ಟಿರಿ. 2 ಈ ವಿಷಯವೊಂದನ್ನು ನನಗೆ ತಿಳಿಸಿರಿ: ನೀವು ಪವಿತ್ರಾತ್ಮನನ್ನು ಹೊಂದಿಕೊಂಡದ್ದು ಹೇಗೆ? ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದ ಹೊಂದಿಕೊಂಡಿರೊ? ಇಲ್ಲ! ಸುವಾರ್ತೆಯನ್ನು ಕೇಳಿ ಅದರಲ್ಲಿ ನಂಬಿಕೆಯಿಟ್ಟದ್ದರಿಂದಲೇ ಪವಿತ್ರಾತ್ಮನನ್ನು ಹೊಂದಿಕೊಂಡಿರಿ. 3 ಕ್ರಿಸ್ತನಲ್ಲಿಯ ನಿಮ್ಮ ಜೀವಿತವನ್ನು ಪವಿತ್ರಾತ್ಮನೊಂದಿಗೆ ಆರಂಭಿಸಿದಿರಿ. ಈಗ ಅದನ್ನು ನಿಮ್ಮ ಸ್ವಂತ ಶಕ್ತಿಯೊಂದಿಗೆ ಮುಂದುವರಿಸಲು ಪ್ರಯತ್ನಿಸುತ್ತೀರೋ? ಅದು ಬುದ್ಧಿಹೀನತೆ! 4 ಅನೇಕ ಸಂಗತಿಗಳನ್ನು ಅನುಭವದಿಂದ ತಿಳಿದುಕೊಂಡಿದ್ದೀರಿ. ಆ ಅನುಭವಗಳೆಲ್ಲಾ ವ್ಯರ್ಥಗೊಂಡವೇ? 5 ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ.
6 ಪವಿತ್ರ ಗ್ರಂಥವು ಅಬ್ರಹಾಮನ ವಿಷಯವಾಗಿಯೂ ಇದನ್ನೇ ಹೇಳುತ್ತದೆ. “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅವನ ನಂಬಿಕೆಯನ್ನು ಪರಿಗಣಿಸಿದ್ದರಿಂದ ನೀತಿವಂತನೆಂಬ ನಿರ್ಣಯ ಅವನಿಗೆ ದೊರೆಯಿತು.”✡ಉಲ್ಲೇಖನ: ಆದಿಕಾಂಡ 15:6. 7 ಆದ್ದರಿಂದ ನಂಬಿಕೆಯನ್ನು ಹೊಂದಿರುವ ಜನರೇ ಅಬ್ರಹಾಮನ “ನಿಜಮಕ್ಕಳು” ಎಂಬುದು ನಿಮಗೆ ತಿಳಿದಿರಬೇಕು. 8 ದೇವರು ಯೆಹೂದ್ಯರಲ್ಲದವರನ್ನು ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. “ಅಬ್ರಹಾಮನೇ, ನಿನ್ನ ಮೂಲಕ ದೇವರು ಭೂಮಿಯ ಮೇಲಿರುವ ಜನರನ್ನೆಲ್ಲ ಆಶೀರ್ವದಿಸುತ್ತಾನೆ”✡ಉಲ್ಲೇಖನ: ಆದಿಕಾಂಡ 12:3. ಎಂಬ ಸುವಾರ್ತೆಯನ್ನು ಅವನಿಗೆ ಮೊದಲೇ ತಿಳಿಸಲಾಯಿತೆಂದು ಪವಿತ್ರ ಗ್ರಂಥವು ಹೇಳುತ್ತದೆ. 9 ಅವನು ಇದನ್ನು ನಂಬಿದ್ದರಿಂದಲೇ ಆಶೀರ್ವಾದ ಹೊಂದಿದನು. ಇದೇ ನಿಯಮ ಇಂದಿಗೂ ಅನ್ವಯಿಸುತ್ತದೆ. ಅವನು ಆಶೀರ್ವಾದ ಹೊಂದಿದಂತೆಯೇ ನಂಬಿಕೆಯಿಡುವ ಜನರೆಲ್ಲರೂ ಆಶೀರ್ವಾದ ಹೊಂದುವರು.
10 ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”✡ಉಲ್ಲೇಖನ: ಧರ್ಮೋಪದೇಶ. 27:26. 11 ಆದ್ದರಿಂದ ಧರ್ಮಶಾಸ್ತ್ರದ ಮೂಲಕ ಯಾವನೂ ನೀತಿವಂತನಾಗಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಪವಿತ್ರ ಗ್ರಂಥವು ಹೇಳುವಂತೆ, “ನಂಬಿಕೆಯ ಮೂಲಕ ನೀತಿವಂತನಾದವನು ಸದಾಕಾಲ ಜೀವಿಸುವನು.”✡ಉಲ್ಲೇಖನ: ಹಬಕ್ಕೂಕ 2:4; ರೋಮ್‌ನಗರದವರಿಗೆ 1:17.
12 ಧರ್ಮಶಾಸ್ತ್ರವು ನಂಬಿಕೆಯ ಮಾರ್ಗವನ್ನು ಬಳಸದೆ, “ಈ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವವನ್ನು ಪಡೆದುಕೊಳ್ಳುತ್ತಾನೆ” ಎಂದು ಹೇಳುತ್ತದೆ. 13 ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”✡ಉಲ್ಲೇಖನ: ಧರ್ಮೋಪದೇಶ. 21:22-23. 14 ಎಲ್ಲಾ ಜನರಿಗೆ ದೇವರ ಆಶೀರ್ವಾದವು ದೊರೆಯಲೆಂದು ಕ್ರಿಸ್ತನು ಹೀಗೆ ಮಾಡಿದನು. ಈ ಆಶೀರ್ವಾದವನ್ನು ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದನು. ಈ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಬರುತ್ತದೆ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮನನ್ನು ನಾವು ಹೊಂದಿಕೊಳ್ಳಲೆಂದು ಯೇಸು ಮರಣಹೊಂದಿದನು. ನಂಬಿಕೆಯಿಡುವುದರ ಮೂಲಕ ನಾವು ಈ ವಾಗ್ದಾನವನ್ನು ಪಡೆದುಕೊಳ್ಳುತ್ತೇವೆ.
ಧರ್ಮಶಾಸ್ತ್ರ ಮತ್ತು ವಾಗ್ದಾನ
15 ಸಹೋದರ ಸಹೋದರಿಯರೇ, ನಾನು ನಿಮಗೊಂದು ಉದಾಹರಣೆಯನ್ನು ಕೊಡುತ್ತೇನೆ. ಒಬ್ಬನು ಇನ್ನೊಬ್ಬನೊಂದಿಗೆ ಮಾಡಿಕೊಳ್ಳುವ ಒಪ್ಪಂದದ ಬಗ್ಗೆ ಯೋಚಿಸಿ. ಆ ಒಪ್ಪಂದವು ಅಧಿಕೃತವಾದಾಗ ಅದನ್ನು ರದ್ದುಮಾಡುವುದಕ್ಕಾಗಲಿ ಅಥವಾ ಅದಕ್ಕೆ ಬೇರೆ ಏನಾದರು ಸೇರಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ. 16 ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ”*ನಿನ್ನ ಸಂತತಿಗೆ ನೋಡಿರಿ: ಆದಿಕಾಂಡ 12:7. ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು. 17 ನಾನು ಹೇಳುತ್ತಿರುವುದೇನೆಂದರೆ, ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದನು. ಆದ್ದರಿಂದ ನಾನೂರಮೂವತ್ತು ವರ್ಷಗಳಾದ ನಂತರ ಬಂದ ಧರ್ಮಶಾಸ್ತ್ರವು ಅಬ್ರಹಾಮನಿಗೆ ದೇವರು ಮಾಡಿದ ವಾಗ್ದಾನವನ್ನು ರದ್ದುಪಡಿಸುವುದೂ ಇಲ್ಲ ಬದಲಾಯಿಸುವುದೂ ಇಲ್ಲ.
18 ದೇವರು ವಾಗ್ದಾನ ಮಾಡಿದಂಥವುಗಳು ಧರ್ಮಶಾಸ್ತ್ರದ ಅನುಸರಣೆಯಿಂದ ದೊರೆಯುತ್ತವೆಯೇ? ಇಲ್ಲ! ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನಾವು ಅವುಗಳನ್ನು ಪಡೆದುಕೊಳ್ಳಬಹುದಾಗಿದ್ದರೆ ಅವುಗಳನ್ನು ನಮಗೆ ಕೊಡುವಂಥದ್ದು ದೇವರ ವಾಗ್ದಾನವಲ್ಲ. ಆದರೆ ದೇವರು ತಾನು ಮಾಡಿದ ವಾಗ್ದಾನದ ಮೂಲಕ ತನ್ನ ಆಶೀರ್ವಾದಗಳನ್ನು ಅಬ್ರಹಾಮನಿಗೆ ಉಚಿತವಾಗಿ ಕೊಟ್ಟನು.
19 ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು. 20 ಒಂದೇ ಪಕ್ಷವಿದ್ದರೆ ಮಧ್ಯಸ್ತನು ಬೇಕಿಲ್ಲ. ದೇವರು ಒಬ್ಬನೇ.
ಮೋಶೆಯ ಧರ್ಮಶಾಸ್ತ್ರದ ಉದ್ದೇಶ
21 ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು. 22 ಆದರೆ ಇದು ಸತ್ಯವಲ್ಲ. ಏಕೆಂದರೆ ಸಮಸ್ತವೂ ಪಾಪಕ್ಕೆ ಒಳಗಾಗಿದೆ ಎಂದು ಪವಿತ್ರ ಗ್ರಂಥ ಪ್ರಕಟಿಸುತ್ತದೆ. ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವವರಿಗೆ ಅವರ ನಂಬಿಕೆಯ ಆಧಾರದ ಮೇಲೆ ವಾಗ್ದಾನದ ಫಲವು ದೊರೆಯಬೇಕೆಂದೇ ಪವಿತ್ರ ಗ್ರಂಥವು ಹೀಗೆ ಪ್ರಕಟಿಸಿದೆ.
23 ಈ ನಂಬಿಕೆಯು ಬರುವುದಕ್ಕಿಂತ ಮೊದಲು ನಾವು ಧರ್ಮಶಾಸ್ತ್ರಕ್ಕೆ ಸೆರೆಯಾಳುಗಳಾಗಿದ್ದೆವು. ಬರಲಿದ್ದ ನಂಬಿಕೆಯ ಮಾರ್ಗವನ್ನು ದೇವರು ನಮಗೆ ತೋರಿಸಿಕೊಡುವ ತನಕ ನಮಗೆ ಸ್ವತಂತ್ರವಿರಲಿಲ್ಲ. 24 ಆದ್ದರಿಂದ ಕ್ರಿಸ್ತನು ಬರುವ ತನಕ ಧರ್ಮಶಾಸ್ತ್ರವು ನಮಗೆ ಯಜಮಾನನಾಗಿತ್ತು. ಕ್ರಿಸ್ತನು ಬಂದ ತರುವಾಯ ನಾವು ನಂಬಿಕೆಯ ಮೂಲಕ ನೀತಿವಂತರಾಗಿರಲು ಸಾಧ್ಯವಾಯಿತು. 25 ಈಗ ನಂಬಿಕೆಯ ಮಾರ್ಗವು ಬಂದಿದೆ. ಆದ್ದರಿಂದ ಈಗ ನಾವು ಧರ್ಮಶಾಸ್ತ್ರದ ಅಧೀನದಲ್ಲಿ ಜೀವಿಸುವುದಿಲ್ಲ.
26-27 ನೀವೆಲ್ಲರೂ ಕ್ರಿಸ್ತನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರಿಂದ ಕ್ರಿಸ್ತನನ್ನೇ ಧರಿಸಿಕೊಂಡಿರಿ. ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದರ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರೆಂಬುದನ್ನು ಇದು ತೋರಿಸುತ್ತದೆ. 28 ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ. 29 ನೀವು ಕ್ರಿಸ್ತನವರಾಗಿದ್ದೀರಿ. ಆದ್ದರಿಂದ ನೀವು ಅಬ್ರಹಾಮನ ಸಂತಾನದವರು. ದೇವರು ಅವನಿಗೆ ಮಾಡಿದ ವಾಗ್ದಾನದ ಪ್ರಕಾರ ನೀವೆಲ್ಲರೂ ದೇವರ ಆಶೀರ್ವಾದಗಳನ್ನು ಪಡೆದುಕೊಳ್ಳುವಿರಿ.