4
ದೇವರಿಗೆ ನಿಮ್ಮನ್ನು ಒಪ್ಪಿಸಿಕೊಳ್ಳಿ
ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಎಲ್ಲಿಂದ ಬರುತ್ತವೆಯೆಂಬುದು ನಿಮಗೆ ತಿಳಿದಿದೆಯೋ? ನಿಮ್ಮ ಸ್ವಾರ್ಥಪರ ಆಸೆಗಳಿಂದ ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಬರುತ್ತವೆ. ಅವು ನಿಮ್ಮ ಅಂತರಂಗದಲ್ಲಿ ಯುದ್ಧ ಮಾಡುತ್ತಿವೆ. ನೀವು ಅನೇಕ ವಸ್ತುಗಳಿಗಾಗಿ ಆಶಿಸುತ್ತೀರಿ. ಆದರೆ ಅವುಗಳನ್ನು ಪಡೆಯುವುದರಲ್ಲಿ ವಿಫಲರಾಗುತ್ತೀರಿ. ಆದ್ದರಿಂದ ನೀವು ಕೊಲೆ ಮಾಡುತ್ತೀರಿ ಮತ್ತು ಇತರರ ಬಗ್ಗೆ ಅಸೂಯೆಪಡುತ್ತೀರಿ. ಆದರೆ ನೀವು ಆಸೆಪಟ್ಟದ್ದನ್ನು ಇನ್ನೂ ಪಡೆಯಲಾರದವರಾಗಿರುವಿರಿ. ಆದ್ದರಿಂದ ನೀವು ವಾದವಿವಾದ ಮಾಡುವಿರಿ ಮತ್ತು ಹೊಡೆದಾಡುವಿರಿ. ನೀವು ದೇವರನ್ನು ಕೇಳಿಕೊಳ್ಳಲಿಲ್ಲ. ಆದ್ದರಿಂದಲೇ, ನೀವು ಆಸೆ ಪಟ್ಟದ್ದು ನಿಮಗೆ ದೊರೆಯಲಿಲ್ಲ. ಮತ್ತು ನೀವು ಕೇಳಿಕೊಂಡಾಗ ನಿಮಗೆ ಅವು ಸಿಗಲಿಲ್ಲ. ಏಕೆಂದರೆ ನಿಮ್ಮ ಉದ್ದೇಶವು ಸರಿಯಾಗಿರಲಿಲ್ಲ. ನೀವು ಅವುಗಳನ್ನು ಕೇವಲ ನಿಮ್ಮ ಸ್ವಂತ ಸುಖಕ್ಕಾಗಿ ಕೇಳಿಕೊಂಡಿರಿ.
ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ. ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ”*ದೇವರು … ಇರಬೇಕೆಂದಷ್ಟೇ ನೋಡಿರಿ: ವಿಮೋಚನ. 20:5. ಎಂದು ಪವಿತ್ರ ಗ್ರಂಥವು ಹೇಳುತ್ತದೆ. ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”ಉಲ್ಲೇಖನ: ಜ್ಞಾನೋಕ್ತಿಗಳು 3:34.
ಆದ್ದರಿಂದ ದೇವರಿಗೆ ನಿಮ್ಮನ್ನು ಒಪ್ಪಿಸಿಕೊಂಡು ಸೈತಾನನನ್ನು ಎದುರಿಸಿರಿ. ಆಗ ಅವನು ನಿಮ್ಮಿಂದ ದೂರ ಓಡಿಹೋಗುತ್ತಾನೆ. ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ. ದುಃಖಪಡಿರಿ, ಗೋಳಾಡಿರಿ, ಕಣ್ಣೀರಿಡಿರಿ! ನಗುವುದನ್ನು ಬಿಟ್ಟು ಗೋಳಾಡಿರಿ. ಸಂತೋಷಿಸುವುದನ್ನು ಬಿಟ್ಟು ವ್ಯಸನಪಡಿರಿ. 10 ಪ್ರಭುವಿನ ಎದುರಿನಲ್ಲಿ ದೀನರಾಗಿರಿ, ಆತನು ನಿಮ್ಮನ್ನು ಉನ್ನತ ಮಟ್ಟಕ್ಕೆ ತರುತ್ತಾನೆ.
ನೀವು ತೀರ್ಪುಗಾರರಲ್ಲ
11 ಸಹೋದರ ಸಹೋದರಿಯರೇ, ಒಬ್ಬರ ವಿರುದ್ಧ ಮತ್ತೊಬ್ಬರು ನಿಂದೆಯ ಮಾತುಗಳನ್ನಾಡದಿರಿ. ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನನ್ನು ನೀವು ಟೀಕಿಸಿದರೆ ಅಥವಾ ಅವನ ಬಗ್ಗೆ ತೀರ್ಪು ನೀಡಿದರೆ, ಅವನು ಅನುಸರಿಸುವ ಧರ್ಮಶಾಸ್ತ್ರವನ್ನೇ ಟೀಕಿಸಿದಂತಾಯಿತು. ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ನೀವು ತೀರ್ಪು ನೀಡಿದರೆ, ಅವನು ಅನುಸರಿಸುತ್ತಿರುವ ಧರ್ಮಶಾಸ್ತ್ರದ ಬಗ್ಗೆ ನೀವು ತೀರ್ಪು ನೀಡಿದಂತಾಯಿತು. ನೀವು ಧರ್ಮಶಾಸ್ತ್ರಕ್ಕೆ ತೀರ್ಪು ನೀಡುವಾಗ ನೀವು ಧರ್ಮಶಾಸ್ತ್ರವನ್ನು ಅನುಸರಿಸುವವರಲ್ಲ. ನೀವು ನ್ಯಾಯಾಧಿಪತಿಗಳಾಗಿದ್ದೀರಿ! 12 ದೇವರೊಬ್ಬನೇ ನಿಯಮಗಳನ್ನು ಮಾಡುವಾತನು. ಆತನೊಬ್ಬನೇ ನಿಜವಾದ ನ್ಯಾಯಾಧಿಪತಿ. ದೇವರೊಬ್ಬನೇ ರಕ್ಷಿಸಬಲ್ಲನು ಮತ್ತು ನಾಶಮಾಡಬಲ್ಲನು. ಆದ್ದರಿಂದ ಬೇರೊಬ್ಬ ವ್ಯಕ್ತಿಯ ಬಗ್ಗೆ ತೀರ್ಪು ನೀಡುವುದು ನಿಮಗೆ ಯೋಗ್ಯವಾದುದಲ್ಲ.
ದೇವರೇ ನಿನ್ನ ಜೀವನದ ಬಗ್ಗೆ ಯೋಚಿಸಲಿ
13 ನಿಮ್ಮಲ್ಲಿ ಕೆಲವರು, “ಈ ಹೊತ್ತು ಅಥವಾ ನಾಳೆ ನಗರಕ್ಕೆ ಹೋಗುತ್ತೇವೆ. ಅಲ್ಲಿ ಒಂದು ವರ್ಷವಿದ್ದು ವ್ಯಾಪಾರಮಾಡಿ ಹಣ ಸಂಪಾದಿಸುತ್ತೇವೆ” ಎಂದು ಹೇಳುವಿರಿ. ಆಲಿಸಿರಿ! ಇದರ ಬಗ್ಗೆ ಯೋಚಿಸಿರಿ: 14 ನಾಳೆ ಏನಾಗುವುದೋ ನಿಮಗೆ ತಿಳಿಯದು! ನಿಮ್ಮ ಜೀವನವು ಹಬೆಯಂತಿದೆ. ನೀವು ಅದನ್ನು ಸ್ವಲ್ಪಕಾಲ ನೋಡುವಿರಿ. ನಂತರ ಅದು ಅದೃಶ್ಯವಾಗುವುದು. 15 ಆದ್ದರಿಂದ, ನೀವು ಹೀಗೆ ಹೇಳಬೇಕು, “ಪ್ರಭುವು ಇಚ್ಛೆಪಟ್ಟರೆ, ನಾವು ಜೀವಿಸಿರುತ್ತೇವೆ. ಇಂಥಿಂಥದ್ದನ್ನು ಮಾಡುತ್ತೇವೆ.” 16 ಆದರೆ ನೀವೀಗ ಜಂಬಗಾರರಾಗಿ ಹೊಗಳಿಕೊಳ್ಳುತ್ತೀರಿ. ನಿಮ್ಮ ಹೊಗಳಿಕೆಯೆಲ್ಲವೂ ಕೆಟ್ಟದ್ದು. 17 ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದ್ದರೂ ಒಳ್ಳೆಯದನ್ನು ಮಾಡದಿರುವವನು ಪಾಪವನ್ನು ಮಾಡುವವನಾಗಿದ್ದಾನೆ.

*4:5: ದೇವರು … ಇರಬೇಕೆಂದಷ್ಟೇ ನೋಡಿರಿ: ವಿಮೋಚನ. 20:5.

4:6: ಉಲ್ಲೇಖನ: ಜ್ಞಾನೋಕ್ತಿಗಳು 3:34.