6
ಐದು ಸಾವಿರಕ್ಕಿಂತ ಹೆಚ್ಚು ಜನರಿಗೆ ಆಹಾರದಾನ
(ಮತ್ತಾಯ 14:13-21; ಮಾರ್ಕ 6:30-44; ಲೂಕ 9:10-17)
1 ತರುವಾಯ, ಯೇಸು ಗಲಿಲಾಯ ಸರೋವರವನ್ನು (ತಿಬೇರಿಯ ಸರೋವರ) ದಾಟಿ ಆಚೆಯ ದಡಕ್ಕೆ ಹೋದನು. 2 ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಏಕೆಂದರೆ ಯೇಸು ರೋಗಿಗಳನ್ನು ಗುಣಪಡಿಸುವುದರ ಮೂಲಕ ತನ್ನ ಅಧಿಕಾರವನ್ನು ತೋರಿಸಿದ್ದನು. ಅವರೆಲ್ಲರೂ ಅದನ್ನು ನೋಡಿದ್ದರು. 3 ಆಗ ಯೇಸು ಬೆಟ್ಟವನ್ನು ಹತ್ತಿ ತನ್ನ ಶಿಷ್ಯರ ಸಂಗಡ ಕುಳಿತುಕೊಂಡನು. 4 ಯೆಹೂದ್ಯರ ಪಸ್ಕಹಬ್ಬವೂ ಬಹು ಸಮೀಪವಾಗಿತ್ತು.
5 ಯೇಸು ಕಣ್ಣೆತ್ತಿ ನೋಡಿದಾಗ, ತನ್ನ ಬಳಿಗೆ ಬರುತ್ತಿದ್ದ ಜನಸಮೂಹವನ್ನು ಕಂಡು ಫಿಲಿಪ್ಪನಿಗೆ, “ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿ ಕೊಂಡುಕೊಳ್ಳೋಣ?” ಎಂದು ಕೇಳಿದನು. 6 (ಫಿಲಿಪ್ಪನನ್ನು ಪರೀಕ್ಷಿಸುವುದಕ್ಕಾಗಿ ಆತನು ಈ ಪ್ರಶ್ನೆಯನ್ನು ಕೇಳಿದನು. ತಾನು ಮಾಡಲಿದ್ದ ಕಾರ್ಯ ಯೇಸುವಿಗೆ ಮೊದಲೇ ತಿಳಿದಿತ್ತು.)
7 ಫಿಲಿಪ್ಪನು, “ಇಲ್ಲಿರುವ ಪ್ರತಿಯೊಬ್ಬರಿಗೆ ರೊಟ್ಟಿಯ ಒಂದು ತುಂಡನ್ನು ಕೊಡಬೇಕಾದರೆ, ಇನ್ನೂರು ದಿನಾರಿ ನಾಣ್ಯಗಳಾದರೂ*ಇನ್ನೂರು ದಿನಾರಿ ನಾಣ್ಯ ಒಬ್ಬನಿಗೆ ದೊರೆಯುತ್ತಿದ್ದ ಒಂದು ವರ್ಷದ ಆದಾಯ. ಬೇಕು” ಎಂದು ಉತ್ತರಕೊಟ್ಟನು.
8 ಅಂದ್ರೆಯನೆಂಬ ಮತ್ತೊಬ್ಬ ಶಿಷ್ಯನು ಅಲ್ಲಿದ್ದನು. ಅಂದ್ರೆಯನು ಸೀಮೋನ್ ಪೇತ್ರನ ಸಹೋದರ. 9 ಅಂದ್ರೆಯನು, “ಇಲ್ಲಿರುವ ಒಬ್ಬ ಹುಡುಗನ ಬಳಿ ಜವೆಗೋಧಿಯ ಐದು ರೊಟ್ಟಿಗಳಿವೆ ಮತ್ತು ಎರಡು ಚಿಕ್ಕ ಮೀನುಗಳಿವೆ. ಆದರೆ ಅವು ಈ ಜನಸಮೂಹಕ್ಕೆ ಸಾಕಾಗುವುದಿಲ್ಲ” ಎಂದು ಹೇಳಿದನು.
10 ಯೇಸು, “ಜನರಿಗೆ ಕುಳಿತುಕೊಳ್ಳಲು ಹೇಳಿರಿ” ಎಂದು ತಿಳಿಸಿದನು. ಆ ಸ್ಥಳದಲ್ಲಿ ಹುಲ್ಲು ಹುಲುಸಾಗಿ ಬೆಳೆದಿತ್ತು. ಅಲ್ಲಿ ಕುಳಿತುಕೊಂಡವರಲ್ಲಿ ಸುಮಾರು ಐದುಸಾವಿರ ಮಂದಿ ಗಂಡಸರಿದ್ದರು. 11 ಬಳಿಕ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ಕುಳಿತುಕೊಂಡಿದ್ದ ಜನರಿಗೆ ಕೊಟ್ಟನು. ಆತನು ಮೀನುಗಳನ್ನು ಕೊಡುವಾಗಲೂ ಅದೇ ರೀತಿ ಮಾಡಿದನು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು.
12 ಅವರೆಲ್ಲರೂ ಊಟ ಮಾಡಿ ತೃಪ್ತರಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಉಳಿದುಹೋದ ರೊಟ್ಟಿ ಮತ್ತು ಮೀನುಗಳ ತುಂಡುಗಳನ್ನು ಒಟ್ಟುಗೂಡಿಸಿರಿ. ಯಾವುದನ್ನೂ ಹಾಳುಮಾಡಬೇಡಿ” ಎಂದು ಹೇಳಿದನು. 13 ಆದ್ದರಿಂದ ಶಿಷ್ಯರು ಉಳಿದುಹೋಗಿದ್ದ ತುಂಡುಗಳನ್ನು ಒಟ್ಟುಗೂಡಿಸಿದರು. ಜನರು ತಿನ್ನಲು ಆರಂಭಿಸಿದಾಗ ಕೇವಲ ಐದು ಜವೆಗೋದಿಯ ರೊಟ್ಟಿಗಳಿದ್ದವು. ಆದರೆ ಶಿಷ್ಯರು ಉಳಿದುಹೋದ ಆಹಾರದ ತುಂಡುಗಳನ್ನು ಒಟ್ಟುಗೂಡಿಸಿದಾಗ ಹನ್ನೆರಡು ದೊಡ್ಡ ಬುಟ್ಟಿಗಳು ತುಂಬಿಹೋದವು.
14 ಯೇಸು ಮಾಡಿದ ಈ ಸೂಚಕಕಾರ್ಯವನ್ನು ಕಂಡ ಜನರು, “ಈ ಲೋಕಕ್ಕೆ ಬರಲಿರುವ ಪ್ರವಾದಿ ನಿಜವಾಗಿಯೂ ಈತನೇ ಇರಬೇಕು” ಎಂದು ಹೇಳತೊಡಗಿದರು.
15 ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು.
ನೀರಿನ ಮೇಲೆ ಕಾಲ್ನಡಿಗೆ
(ಮತ್ತಾಯ 14:22-27; ಮಾರ್ಕ 6:45-52)
16 ಆ ಸಾಯಂಕಾಲ ಯೇಸುವಿನ ಶಿಷ್ಯರು ಸರೋವರಕ್ಕೆ (ಗಲಿಲಾಯ) ಹೋದರು. 17 ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಆದ್ದರಿಂದ ಶಿಷ್ಯರು ದೋಣಿಯನ್ನು ಹತ್ತಿ ಸರೋವರದ ಆಚೆಯ ಕಡೆಯಿದ್ದ ಕಪೆರ್ನೌಮಿಗೆ ಹೊರಟರು. 18 ಗಾಳಿಯು ಬಹು ರಭಸವಾಗಿ ಬೀಸುತ್ತಿತ್ತು. ಸರೋವರದ ಅಲೆಗಳು ದೊಡ್ಡದಾಗುತ್ತಿದ್ದವು. 19 ಅವರು ಹುಟ್ಟುಹಾಕುತ್ತಾ ಸುಮಾರು ಮೂರು ಅಥವಾ ನಾಲ್ಕು ಮೈಲಿಗಳವರೆಗೆ ದೋಣಿಯನ್ನು ನಡೆಸಿದ ನಂತರ ಯೇಸುವನ್ನು ಕಂಡರು. ಆತನು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುತ್ತಿರುವುದನ್ನು ಕಂಡು ಅವರಿಗೆ ಭಯವಾಯಿತು. 20 ಯೇಸು ಅವರಿಗೆ, “ಹೆದರಬೇಡಿರಿ, ನಾನೇ” ಎಂದು ಹೇಳಿದನು. 21 ಆಗ ಅವರು ಯೇಸುವನ್ನು ದೋಣಿಯೊಳಗೆ ಬರಮಾಡಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲೇ, ಅವರು ಹೋಗಬೇಕೆಂದಿದ್ದ ಸ್ಥಳದ ದಡಕ್ಕೆ ದೋಣಿಯು ತಲುಪಿತು.
ಯೇಸುವಿಗಾಗಿ ಹುಡುಕಾಟ
22 ಮರುದಿನವಾಯಿತು. ಕೆಲವು ಜನರು ಸರೋವರದ ಮತ್ತೊಂದು ಕಡೆಯಲ್ಲಿ ಉಳಿದುಕೊಂಡಿದ್ದರು. ಯೇಸು ತನ್ನ ಶಿಷ್ಯರೊಂದಿಗೆ ದೋಣಿಯಲ್ಲಿ ಹೋಗಲಿಲ್ಲ ಎಂಬುದು ಈ ಜನರಿಗೆ ತಿಳಿದಿತ್ತು. ಯೇಸುವಿನ ಶಿಷ್ಯರು ಮಾತ್ರ ದೋಣಿಯಲ್ಲಿ ಹೋದರೆಂಬುದೂ ಮತ್ತು ಅದೊಂದು ದೋಣಿ ಮಾತ್ರ ಅಲ್ಲಿತ್ತೆಂಬುದೂ ಅವರಿಗೆ ಗೊತ್ತಿತ್ತು. 23 ಆದರೆ ಅಷ್ಟರಲ್ಲಿಯೇ, ಕೆಲವು ದೋಣಿಗಳು ತಿಬೇರಿಯಾದಿಂದ ಬಂದವು. ಅವರು ಊಟ ಮಾಡಿದ ಸ್ಥಳಕ್ಕೆ ಸಮೀಪದ ದಡದಲ್ಲಿಯೇ ಆ ದೋಣಿಗಳು ನಿಂತುಕೊಂಡವು. ಪ್ರಭುವು ಸ್ತೋತ್ರ ಮಾಡಿದ ಮೇಲೆ ಅವರು ರೊಟ್ಟಿಯನ್ನು ಆ ಸ್ಥಳದಲ್ಲೇ ತಿಂದಿದ್ದರು. 24 ಯೇಸು ಮತ್ತು ಆತನ ಶಿಷ್ಯರು ಅಲ್ಲಿಲ್ಲದಿರುವುದನ್ನು ಜನರು ಕಂಡು ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಹೋದರು. ಅವರು ಯೇಸುವನ್ನು ಕಂಡುಕೊಳ್ಳಬೇಕೆಂದಿದ್ದರು.
ಯೇಸುವೇ ಜೀವದ ರೊಟ್ಟಿ
25 ಜನರು ಯೇಸುವನ್ನು ಸರೋವರದ ಆಚೆಯ ದಡದಲ್ಲಿ ಕಂಡುಕೊಂಡರು. ಅವರು ಆತನಿಗೆ, “ಗುರುವೇ, ನೀನು ಇಲ್ಲಿಗೆ ಯಾವಾಗ ಬಂದೆ?” ಎಂದು ಕೇಳಿದರು.
26 ಯೇಸು, “ನೀವು ನನ್ನನ್ನು ಏಕೆ ಹುಡುಕುತ್ತಿದ್ದೀರಿ? ನನ್ನ ಅಧಿಕಾರವನ್ನು ನಿರೂಪಿಸುವ ನನ್ನ ಅದ್ಭುತಕಾರ್ಯಗಳನ್ನು ಕಂಡು ನೀವು ನನ್ನನ್ನು ಹುಡುಕುತ್ತಿದ್ದೀರೋ? ಇಲ್ಲ! ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ರೊಟ್ಟಿಯನ್ನು ತೃಪ್ತಿಯಾಗುವಷ್ಟು ತಿಂದಕಾರಣ ನನ್ನನ್ನು ಹುಡುಕುತ್ತಿದ್ದೀರಿ. 27 ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.
28 ಜನರು ಯೇಸುವಿಗೆ, “ನಾವು ಯಾವ ಕಾರ್ಯಗಳನ್ನು ಮಾಡಬೇಕೆಂದು ದೇವರು ಬಯಸುತ್ತಾನೆ?” ಎಂದು ಕೇಳಿದರು.
29 ಯೇಸು, “ದೇವರು ಕಳುಹಿಸಿದಾತನನ್ನು ನೀವು ನಂಬಬೇಕು. ಈ ಕಾರ್ಯವನ್ನೇ ದೇವರು ನಿಮ್ಮಿಂದ ಅಪೇಕ್ಷಿಸುತ್ತಾನೆ” ಎಂದು ಉತ್ತರಕೊಟ್ಟನು.
30 ಆದ್ದರಿಂದ ಜನರು, “ದೇವರಿಂದ ಕಳುಹಿಸಲ್ಪಟ್ಟಾತನು ನೀನೇ ಎಂಬುದನ್ನು ನಿರೂಪಿಸುವುದಕ್ಕಾಗಿ ನೀನು ಯಾವ ಸೂಚಕಕಾರ್ಯವನ್ನು ಮಾಡುವೆ? 31 ನಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು (ಆಹಾರವನ್ನು) ತಿಂದರು. ‘ದೇವರು ಅವರಿಗೆ ತಿನ್ನಲು ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು’✡ಉಲ್ಲೇಖನ: ಕೀರ್ತನೆ. 78:24. ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದರು.
32 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ಜನರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ. ಆದರೆ ನನ್ನ ತಂದೆಯು ನಿಮಗೆ ಪರಲೋಕದಿಂದ ನಿಜವಾದ ರೊಟ್ಟಿಯನ್ನು ಕೊಡುವನು. 33 ದೇವರ ರೊಟ್ಟಿ ಯಾವುದು? ಪರಲೋಕದಿಂದ ಇಳಿದುಬಂದು ಈ ಲೋಕಕ್ಕಾಗಿ ಜೀವವನ್ನು ಕೊಡುವಾತನೇ ದೇವರು ಕೊಡುವ ರೊಟ್ಟಿ” ಎಂದು ಹೇಳಿದನು.
34 ಜನರು, “ಅಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದು ಕೇಳಿಕೊಂಡರು.
35 ಅದಕ್ಕೆ ಯೇಸು, “ನಾನೇ ಜೀವಕೊಡುವ ರೊಟ್ಟಿ. ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗದು. ನನ್ನಲ್ಲಿ ನಂಬಿಕೆ ಇಡುವವನಿಗೆ ಎಂದಿಗೂ ಬಾಯಾರಿಕೆಯಾಗದು. 36 ನಾನು ನಿಮಗೆ ಮೊದಲೇ ಹೇಳಿದಂತೆ, ನೀವು ನನ್ನನ್ನು ನೋಡಿದ್ದರೂ ಇನ್ನೂ ನನ್ನನ್ನು ನಂಬುತ್ತಿಲ್ಲ. 37 ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ. 38 ನಾನು ಪರಲೋಕದಿಂದ ಇಳಿದು ಬಂದದ್ದು ದೇವರ ಚಿತ್ತಕ್ಕನುಸಾರವಾಗಿ ಮಾಡುವುದಕ್ಕಾಗಿಯೇ ಹೊರತು ನನ್ನ ಚಿತ್ತಕ್ಕನುಸಾರವಾಗಿಯಲ್ಲ. 39 ದೇವರು ನನಗೆ ಕೊಟ್ಟಿರುವ ಯಾವ ವ್ಯಕ್ತಿಯನ್ನೂ ನಾನು ಕಳೆದುಕೊಳ್ಳಕೂಡದು. ಅಲ್ಲದೆ ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸಬೇಕು. ನನ್ನನ್ನು ಕಳುಹಿಸಿದಾತನು ಆ ಕಾರ್ಯವನ್ನೇ ನನ್ನಿಂದ ಅಪೇಕ್ಷಿಸುತ್ತಾನೆ. 40 ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.
41 ಯೆಹೂದ್ಯರು ಯೇಸುವಿನ ಬಗ್ಗೆ ಗುಣುಗುಟ್ಟಿದರು. “ಪರಲೋಕದಿಂದ ಇಳಿದುಬರುವ ರೊಟ್ಟಿಯೇ ನಾನು” ಎಂದು ಆತನು ಹೇಳಿದ್ದರಿಂದ ಅವರು ಆಕ್ಷೇಪಿಸಿದರು. 42 ಯೆಹೂದ್ಯರು, “ಇವನು ಯೇಸು. ಇವನ ತಂದೆತಾಯಿಗಳನ್ನು ನಾವು ಬಲ್ಲೆವು. ಇವನು ಕೇವಲ ಯೋಸೇಫನ ಮಗನು. ‘ನಾನು ಪರಲೋಕದಿಂದ ಇಳಿದುಬಂದೆನು’ ಎಂದು ಇವನು ಹೇಳುವುದಕ್ಕೆ ಹೇಗೆ ಸಾಧ್ಯ?” ಎಂದರು.
43 ಅದಕ್ಕೆ ಯೇಸು, “ನೀವು ಗುಣುಗುಟ್ಟುತ್ತಿರುವುದನ್ನು ನಿಲ್ಲಿಸಿರಿ. 44 ತಂದೆಯೇ ನನ್ನನ್ನು ಕಳುಹಿಸಿದನು ಮತ್ತು ತಂದೆಯೇ ನನ್ನ ಬಳಿಗೆ ಜನರನ್ನು ಕರೆತರುವನು. ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸುವೆನು. ತಂದೆಯು ನನ್ನ ಬಳಿಗೆ ಕರೆದುಕೊಂಡು ಬರದ ಹೊರತು ಯಾವನೂ ನನ್ನ ಬಳಿಗೆ ಬರಲಾರನು. 45 ‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’✡ಉಲ್ಲೇಖನ: ಯೆಶಾಯ 54:13. ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು. 46 ತಂದೆಯಿಂದ ಬಂದಿರುವಾತನು ಮಾತ್ರ ತಂದೆಯನ್ನು ನೋಡಿದವನಾಗಿದ್ದಾನೆ. ಬೇರೆ ಯಾವ ವ್ಯಕ್ತಿಯೂ ತಂದೆಯನ್ನು ಎಂದೂ ನೋಡಿಲ್ಲ.
47 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನನ್ನು ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆ. 48 ನಾನೇ ಜೀವಕೊಡುವ ರೊಟ್ಟಿ. 49 ನಿಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು ತಿಂದರು. ಆದರೆ ಎಲ್ಲಾ ಜನರಂತೆ ಅವರೂ ಸತ್ತುಹೋದರು. 50 ಪರಲೋಕದಿಂದ ಇಳಿದುಬರುವ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಎಂದಿಗೂ ಸಾಯುವುದಿಲ್ಲ. 51 ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.
52 ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ನಮಗೆ ತಿನ್ನಲು ಹೇಗೆ ಕೊಡಲಾದೀತು?” ಎಂದು ತಮ್ಮತಮ್ಮೊಳಗೆ ವಾಗ್ವಾದ ಮಾಡತೊಡಗಿದರು.
53 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಮನುಷ್ಯಕುಮಾರನ ದೇಹವನ್ನು ತಿನ್ನಲೇಬೇಕು. ಆತನ ರಕ್ತವನ್ನು ಕುಡಿಯಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮಲ್ಲಿ ನಿಜವಾದ ಜೀವ ಇರುವುದಿಲ್ಲ. 54 ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. 55 ನನ್ನ ದೇಹವು ನಿಜವಾದ ಆಹಾರವಾಗಿದೆ. ನನ್ನ ರಕ್ತವು ನಿಜವಾದ ಪಾನೀಯವಾಗಿದೆ. 56 ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ವಾಸಿಸುತ್ತಾನೆ. ನಾನು ಅವನಲ್ಲಿ ವಾಸಿಸುತ್ತೇನೆ.
57 “ತಂದೆಯೇ ನನ್ನನ್ನು ಕಳುಹಿಸಿದನು. ತಂದೆಯು ಜೀವಸ್ವರೂಪನಾಗಿದ್ದಾನೆ. ನಾನು ತಂದೆಯಿಂದಲೇ ಜೀವಿಸುತ್ತೇನೆ. ಆದ್ದರಿಂದ ನನ್ನನ್ನು ತಿನ್ನುವವನು ನನ್ನಿಂದಲೇ ಜೀವಿಸುವನು. 58 ನಮ್ಮ ಪಿತೃಗಳು ತಿಂದ ರೊಟ್ಟಿಯಂತಲ್ಲ ನಾನು. ಅವರು ಆ ರೊಟ್ಟಿಯನ್ನು ತಿಂದರೂ ಎಲ್ಲಾ ಜನರಂತೆ ಸತ್ತು ಹೋದರು. ನಾನು ಪರಲೋಕದಿಂದ ಇಳಿದುಬಂದ ರೊಟ್ಟಿ. ಈ ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು,” ಎಂದು ಹೇಳಿದನು.
59 ಯೇಸು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶಿಸುತ್ತಿದ್ದಾಗ ಈ ಸಂಗತಿಗಳನ್ನೆಲ್ಲಾ ಹೇಳಿದನು.
ನಿತ್ಯಜೀವದ ನುಡಿಗಳು
60 ಇದನ್ನು ಕೇಳಿದ ಆತನ ಶಿಷ್ಯರಲ್ಲಿ ಅನೇಕರು, “ಈ ಉಪದೇಶವು ಕಠಿಣವಾಗಿದೆ. ಇದನ್ನು ಯಾರು ಗ್ರಹಿಸಿಕೊಳ್ಳಬಲ್ಲರು?” ಎಂದರು.
61 ತನ್ನ ಶಿಷ್ಯರು ಆಕ್ಷೇಪಿಸುತ್ತಿರುವುದನ್ನು ತಿಳಿದಿದ್ದ ಯೇಸು, “ಈ ಉಪದೇಶದಿಂದ ನಿಮಗೆ ಬೇಸರವಾಯಿತೇ? 62 ಹಾಗಾದರೆ ಮನುಷ್ಯಕುಮಾರನು ತಾನು ಬಿಟ್ಟುಬಂದ ಸ್ಥಳಕ್ಕೆ ಮರಳಿಹೋಗುವುದನ್ನು ನೀವು ನೋಡುವಾಗ ಬೇಸರಪಡುವಿರಾ? 63 ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ. 64 ಆದರೆ ನಿಮ್ಮಲ್ಲಿ ಕೆಲವರು ನಂಬುವುದಿಲ್ಲ” ಎಂದು ಹೇಳಿದನು. (ತನ್ನನ್ನು ನಂಬಿಲ್ಲದವರು ಯಾರೆಂದೂ ತನಗೆ ದ್ರೋಹ ಮಾಡುವವನು ಯಾರೆಂದೂ ಯೇಸುವಿಗೆ ಮೊದಲಿಂದಲೂ ತಿಳಿದಿತ್ತು.) 65 ಇದಲ್ಲದೆ ಯೇಸು, “ತಂದೆಯ ಅನುಮತಿ ಇಲ್ಲದೆ ಯಾವನೂ ನನ್ನ ಬಳಿಗೆ ಬರಲಾರನು ಎಂದು ನಾನು ನಿಮಗೆ ಹೇಳಿದ್ದಕ್ಕೆ ಅದೇ ಕಾರಣ” ಎಂದನು.
66 ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತನ ಹಿಂಬಾಲಕರಲ್ಲಿ ಅನೇಕರು ಆತನನ್ನು ತೊರೆದುಬಿಟ್ಟರು. ಅವರು ಆತನನ್ನು ಹಿಂಬಾಲಿಸಲಿಲ್ಲ.
67 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಸಹ ನನ್ನನ್ನು ಬಿಟ್ಟುಹೋಗಬೇಕೆಂದಿರುವಿರಾ?” ಎಂದು ಕೇಳಿದನು.
68 ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನಾವೆಲ್ಲಿಗೆ ಹೋಗೋಣ? ನಿತ್ಯಜೀವವನ್ನು ಕೊಡುವ ಸಂಗತಿಗಳು ನಿನ್ನಲ್ಲಿವೆ. 69 ನಾವು ನಿನ್ನಲ್ಲಿ ನಂಬಿಕೆ ಇಡುತ್ತೇವೆ. ನೀನು ದೇವರಿಂದ ಬಂದ ಪರಿಶುದ್ಧನೆಂದು ನಮಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.
70 ಬಳಿಕ ಯೇಸು, “ನಾನು ಆರಿಸಿಕೊಂಡ ಹನ್ನೆರಡು ಮಂದಿ ನೀವೇ. ಆದರೆ ನಿಮ್ಮಲ್ಲಿರುವ ಒಬ್ಬನು ಸೈತಾನನ ಮಗನಾಗಿದ್ದಾನೆ” ಎಂದು ಉತ್ತರಕೊಟ್ಟನು. 71 ಯೇಸು ಸಿಮೋನನ ಮಗನಾದ ಇಸ್ಕರಿಯೋತ ಯೂದನ ಬಗ್ಗೆ ಮಾತಾಡುತ್ತಿದ್ದನು. ಯೂದನು ಹನ್ನೆರಡು ಮಂದಿ ಅಪೊಸ್ತಲರಲ್ಲಿ ಒಬ್ಬನಾಗಿದ್ದನು. ಆದರೆ ಮುಂದೆ ಯೇಸುವಿಗೆ ದ್ರೋಹ ಮಾಡಿದ ವ್ಯಕ್ತಿ ಇವನೇ.
*6:7: ಇನ್ನೂರು ದಿನಾರಿ ನಾಣ್ಯ ಒಬ್ಬನಿಗೆ ದೊರೆಯುತ್ತಿದ್ದ ಒಂದು ವರ್ಷದ ಆದಾಯ.
✡6:31: ಉಲ್ಲೇಖನ: ಕೀರ್ತನೆ. 78:24.
✡6:45: ಉಲ್ಲೇಖನ: ಯೆಶಾಯ 54:13.