64
ರಚನೆಗಾರ: ದಾವೀದ.
ದೇವರೇ, ನನಗೆ ಕಿವಿಗೊಡು.
ವೈರಿಯು ನನಗೆ ಬೆದರಿಕೆ ಹಾಕಿದ್ದಾನೆ.
ನನ್ನ ಪ್ರಾಣವನ್ನು ರಕ್ಷಿಸು.
ನನ್ನ ಶತ್ರುಗಳ ಒಳಸಂಚುಗಳಿಂದ ನನ್ನನ್ನು ಸಂರಕ್ಷಿಸು.
ಆ ದುಷ್ಟರಿಗೆ ಸಿಕ್ಕದಂತೆ ನನ್ನನ್ನು ಮರೆಮಾಡು.
ಅವರು ನನ್ನ ಬಗ್ಗೆ ಕಡುಸುಳ್ಳುಗಳನ್ನು ಹೇಳಿದ್ದಾರೆ.
ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.
ಅವರ ಮಾತುಗಳು ವಿಷಬಾಣಗಳಂತಿವೆ.
ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿದ್ದು ನಿರ್ಭಯದಿಂದ*
ನೀತಿವಂತನ ಮೇಲೆ ಆ ಬಾಣಗಳನ್ನು ಎಸೆಯುತ್ತಾರೆ.
ಕೇಡುಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು.
“ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು.
ಅವರು ತಮ್ಮ ಬಲೆಗಳನ್ನು ಅಡಗಿಸಿಟ್ಟಿದ್ದಾರೆ; ಬೇಟೆಗಳಿಗಾಗಿ ಎದುರುನೋಡುತ್ತಿದ್ದಾರೆ.
ಜನರು ಕುತಂತ್ರಿಗಳಾಗಿದ್ದರೆ, ಅವರ ಆಲೋಚನೆಗಳನ್ನು ತಿಳಿದುಕೊಳ್ಳುವುದು ಬಹು ಕಷ್ಟ.
ಆದರೆ ದೇವರು ಇದ್ದಕ್ಕಿದ್ದಂತೆ ತನ್ನ ಬಾಣಗಳನ್ನು ಎಸೆಯುವನು.
ಆಗ ಆ ದುಷ್ಟರು ಗಾಯಗೊಳ್ಳುವರು.
ದುಷ್ಟರು ಬೇರೆಯವರಿಗೆ ಕೇಡುಮಾಡಲು ಆಲೋಚಿಸುವರು.
ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು.
ಆಗ ಅವರನ್ನು ಕಂಡ ಪ್ರತಿಯೊಬ್ಬನೂ
ಆಶ್ಚರ್ಯದಿಂದ ತಲೆಯಾಡಿಸುವನು.
ದೇವರ ಕಾರ್ಯವನ್ನು ಜನರು ಕಂಡು
ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು.
ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು
ಆತನಲ್ಲಿ ಭಯಭಕ್ತಿಯುಳ್ಳವರಾಗುವರು.
10 ಸಜ್ಜನರು ಯೆಹೋವನಲ್ಲಿ ಸಂತೋಷಿಸುತ್ತಾ
ಆತನನ್ನೇ ಆಶ್ರಯಿಸಿಕೊಳ್ಳುವರು.
ಯಥಾರ್ಥವಂತರು ಯೆಹೋವನನ್ನು ಕೊಂಡಾಡುವರು.
 
* 64:4 ನಿರ್ಭಯದಿಂದ ಅಥವಾ ಅಗೌರವದಿಂದ. 64:6 ಅವರು … ಬಹು ಕಷ್ಟ ಅಥವಾ, “ಅವರು ದುಷ್ಟ ಯೋಜನೆಗಳಿಗಾಗಿ ಎದುರುನೋಡುತ್ತಾ, ನಮ್ಮಲ್ಲಿ ಸಂಪೂರ್ಣವಾದ ಯೋಜನೆಯಿದೆ” ಎನ್ನುತ್ತಾರೆ.