ನೂತನ ದೇವಾಲಯದ ವೈಭವ
೧ ಏಳನೆಯ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಕೊಟ್ಟು, ೨ “ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,
೩ ‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು,
ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ?
ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ?
ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯೇಲ್ಲವೇ?’
೪ ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು;
ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು;
ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.
೫ ‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು;
ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’
೬ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ,
ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;
೭ ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು,
ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
೮ ‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
೯ ‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’ ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಜನರ ದೋಷವೇ ದುರ್ಭಿಕ್ಷಕ್ಕೆ ಕಾರಣ
೧೦ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರುಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು. ೧೧ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯಾಜಕರ ಹತ್ತಿರ ಹೋಗಿ, ೧೨ ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.
೧೩ ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು. ೧೪ ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ದವಾಗಿಯೇ ಕಾಣುತ್ತಿದ್ದೆ.
೧೫ “ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ೧೬ ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು. ೧೭ ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.
೧೮ “ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ. ೧೯ ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷೆ, ಅಂಜೂರ, ದಾಳಿಂಬೆ, ಒಲೀವ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”
ದೇಶಾಧಿಪತಿಗೆ ಹಾಗು ಜೆರುಬ್ಬಾಬೇಲನಿಗೆ ನೀಡಿದ ವಾಗ್ದಾನ
೨೦ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಹಗ್ಗಾಯನಿಗೆ ಈ ಎರಡನೆಯ ವಾಕ್ಯವನ್ನು ದಯಪಾಲಿಸಿ, ೨೧ “ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ, ನಾನು ಭೂಮ್ಯಾಕಾಶಗಳನ್ನು ಅದುರಿಸಿ,
೨೨ ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು;
ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”
೨೩ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ,
ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು,
ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.