28
ಯೇಸುವಿನ ಪುನರುತ್ಥಾನ
ಮಾರ್ಕ 16:1-10; ಲೂಕ 24:1-10; ಯೋಹಾ 20:1-18
ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ *ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು. ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು. ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು; ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು. ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು; ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ; ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು. ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು. ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು. 10 ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು.
ಕಾವಲುಗಾರನ ಸುದ್ದಿ
11 ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು. 12 ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು, 13 “ ‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ; 14 ಈ ಸುದ್ದಿಯು ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದರು. 15 ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.
ಯೇಸುವಿನ ಕಡೆಯ ಅಪ್ಪಣೆ
16 ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು. 17 ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು. 18 ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. 19 ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. 20 ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು§ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.
* 28:1 ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇದ್ದಾಗ 28:7 ಮತ್ತಾ 28:10,16; 26:32 28:19 ಮಾರ್ಕ 16:15,16; ಲೂಕ 24:47 § 28:20 ಮತ್ತಾ 18:20; ಯೋಹಾ 14:18,19